ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ
ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಇಂದು *ಕನ್ನಡ ರಾಜ್ಯೋತ್ಸವ ಸಂಭ್ರಮ* ವಿಶೇಷ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸೇವಾ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಶ್ರೀಕೃಷ್ಣ ನೀರಮೂಲೆಯವರು ಸಮಾರಂಭವನ್ನು ಉದ್ಘಾಟಿಸಿ, ಮಾತನಾಡಿ, ಕನ್ನಡ ಭಾಷೆಯನ್ನು ವಿದ್ಯಾರ್ಥಿಗಳು ಉಳಿಸಿ ಬೆಳೆಸಬೇಕು. ಭಾಷೆ – ಸಂಸ್ಕೃತಿಯ ಉಳಿವಿಗಾಗಿ ಶ್ರಮಿಸಿದ ಹಿರಿಯರ ಆದರ್ಶಗಳನ್ನು ಸದಾ ನೆನಪಿಸಿಕೊಳ್ಳಬೇಕು ಎಂದರು.
ಮುಖ್ಯಅತಿಥಿಗಳಾಗಿ ಭಾಗವಹಿಸಿದ ಸೇವಾಸಮಿತಿಯ ಕೋಶಾಧಿಕಾರಿಗಳಾದ ಶ್ರೀ ಉದಯಶಂಕರ್ ನೀರ್ಪಾಜೆಯವರು ಮಾತನಾಡಿ ವಿದ್ಯಾರ್ಥಿಗಳು ಶಿಸ್ತು ಹಾಗೂ ಜೀವನ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.
ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನ ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನಾಡಿ, ಎಲ್ಲಾ ಭಾಷೆಗಳನ್ನು ಕಲಿಯಬೇಕು. ಕನ್ನಡವನ್ನು ಮರೆಯಬಾರದು ಮತ್ತು ಕನ್ನಡ ಮಾತನಾಡಲು ಸಂಕೋಚ ಬೇಡ ಎಂದರು.
ಈ ಸಮಾರಂಭದಲ್ಲಿ ಪದವಿಪೂರ್ವ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿ ಸಂಘದ ನಾಯಕರು ಹಾಗೂ ವಿದ್ಯಾರ್ಥಿ ಪದಾಧಿಕಾರಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರತಿಮ್ಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.
ಇದೇ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪದವಿಪೂರ್ವ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ನೀಡಲಾಯಿತು.
ನಂತರ ವಿದ್ಯಾರ್ಥಿಗಳು ಭಾಷಣ, ಸಮೂಹ ಗಾಯನ, ನೃತ್ಯಗಳ ಮೂಲಕ ಕನ್ನಡ ನಾಡು – ನುಡಿಗೆ ಗೌರವ ಸಲ್ಲಿಸಿದರು.
ವಿದ್ಯಾರ್ಥಿನಿ ಸುಧೀಕ್ಷಾ ಸ್ವಾಗತಿಸಿ, ಸಾನ್ವಿ ವಂದಿಸಿದರು. ಅಂಕಿತಾ ನಿರ್ವಹಿಸಿದರು.



